ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಬೆಳಗ್ಗೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡವರನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ವಿವರ:
ಸಾಗರ ಮಾರ್ಗದಿಂದ ಕೊಪ್ಪದತ್ತ ಪ್ರಯಾಣಿಸುತ್ತಿದ್ದ ಹ್ಯೂಂಡೈ ಐ20 ಕಾರು ಹಾಗೂ ಹೊಸನಗರ ಮಾರ್ಗದಿಂದ ಶಿರಸಿಯತ್ತ ತೆರಳುತ್ತಿದ್ದ ಮಾರುತಿ ಅಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಹಾನಿಗೊಳಗಾಗಿದ್ದು, ಘಟನಾ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ಸ್ನೇಹಿತನ ಪಾರ್ಟಿಗೆ ಹೋದ ಯುವಕ ಸಾವು!














