ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೊಬ್ಬನಿಗೆ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 31,000 ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
2024ರಲ್ಲಿ ಭದ್ರಾವತಿ ತಾಲ್ಲೂಕಿನ 20 ವರ್ಷದ ಯುವಕನೊಬ್ಬ, 16 ವರ್ಷದ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಸಂತ್ರಸ್ತೆಯ ಕಡೆಯವರು ನೀಡಿದ ದೂರಿನ ಮೇರೆಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ > > ಹೊಳೆಹೊನ್ನೂರು, ಡ್ರೋಣ್ ಬಳಸಿ ಪೊಲೀಸ್ ದಾಳಿ, 5 ಜನರ ಬಂಧನ
ಪ್ರಕರಣದ ತನಿಖೆ ಕೈಗೊಂಡಿದ್ದ ಆಗಿನ ತನಿಖಾಧಿಕಾರಿ ಕವಿತಾ ಇ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಇದನ್ನೂ ಓದಿ > > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್ಫೆಸ್ಟ್-2.0’ ಎಐ ಹ್ಯಾಕಥಾನ್ ಉದ್ಘಾಟನೆ
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು, ಆರೋಪಿ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 31,000 ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಶ್ರೀಧರ್ ವಾದ ಮಂಡಿಸಿದ್ದರು.














