ಹೊಸನಗರ: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದವು.
ಬೆಳಿಗ್ಗೆ ದೇವಸ್ಥಾನದಲ್ಲಿ ಭಕ್ತರ ಕಲ್ಯಾಣಾರ್ಥವಾಗಿ ಪವಮಾನ ಸೂಕ್ತ ಪಾರಾಯಣ ನಡೆಯಿತು.
ನಂತರ ಪಂಚಾಮೃತಾಭಿಷೇಕ ಹಾಗೂ ಪವಮಾನ ಕಲಶಾಭಿಷೇಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರಿಂದ ಅಷ್ಟೋತ್ತರ ಶತಾಧಿಕ ಸಹಸ್ರನಾಮ ಪಾರಾಯಣ ನಡೆಯಿತು.
ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. ಸಂಜೆ ವೇಳೆಗೆ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಮಹಾಮಂಗಳಾರತಿ ನೆರವೇರಿತು.
ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎನ್. ಸುಧಾಕರ್ ಮತ್ತು ಸಮಿತಿ ಸದಸ್ಯರು ನೇತೃತ್ವ ವಹಿಸಿದ್ದರು.ಭರತನಾಟ್ಯ, ಭಕ್ತಿ ಗಾಯನ ಮೊದಲಾದ ಸಾಂಸ್ಕೃತಿಕ ಕಾರ್‍ಯಗಳು ನಡೆಯಿತು. ವಿವಿಧ ರಂಗಗಳಲ್ಲಿ ಗುರುತಿಸಿಕೊಂಡ ಗಣ್ಯರನ್ನು ಅಭಿನಂದಿಸಲಾಯಿತು. ಭಕ್ತಾದಿಗಳಿಗೆ ಅನ್ನ ದಾಸೋಹ ಏರ್ಪಡಿಸಲಾಗಿತ್ತು.













