ಶಿವಮೊಗ್ಗ : ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿಯಲ್ಲಿ ಅನ್ಯ ಪದವೀಧರರಿಗೆ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ, ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಂದು ಕೃಷಿ ವಿಶ್ವ ವಿದ್ಯಾಲಯದ ಗೇಟ್ ಬಂದ್ ಮಾಡಿ ಪ್ರತಿಭಟನಾ ಧರಣಿ ನಡೆಸಿದರು.
ಧಾರವಾಡ, ರಾಯಚೂರು, ಬೆಂಗಳೂರು ಹಾಗೂ ಮಂಡ್ಯ ಕೃಷಿ ವಿಶ್ವವಿದ್ಯಾಲಯಗಳಲ್ಲಿಯೂ ಇದೇ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ 10–15 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು, ಇಂದು “ಬೆಂಗಳೂರು ಚಲೋ” ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ > > ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ
ನೇಮಕಾತಿ ನಿಯಮಗಳಲ್ಲಿ ಬದಲಾವಣೆಗಳನ್ನು ಕಾನೂನುಬದ್ಧ ಪ್ರಕ್ರಿಯೆಯ ಮೂಲಕವೇ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಸರ್ಕಾರ ತಮ್ಮ ಬೇಡಿಕೆಗಳನ್ನು ಪರಿಗಣಿಸಿ ನ್ಯಾಯಸಮ್ಮತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಸಂವಿಧಾನಬದ್ಧ ಹಾಗೂ ಕಾನೂನುಬದ್ಧ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ವಿದ್ಯಾರ್ಥಿಗಳು, ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಅತ್ಯಂತ ತಾಂತ್ರಿಕ ಸ್ವರೂಪದ್ದಾಗಿದ್ದು, ರೈತರಿಗೆ ವೈಜ್ಞಾನಿಕ ಕೃಷಿ ಸಲಹೆ, ಬೆಳೆ ನಿರ್ವಹಣೆ, ಮಣ್ಣಿನ ಆರೋಗ್ಯ ಸಂರಕ್ಷಣೆ, ಕೀಟ ಮತ್ತು ರೋಗ ನಿಯಂತ್ರಣ, ರಸಗೊಬ್ಬರ ಹಾಗೂ ಬೀಜಗಳ ಗುಣಮಟ್ಟದ ಮೇಲ್ವಿಚಾರಣೆ ಸೇರಿದಂತೆ ಹಲವು ಪ್ರಮುಖ ಜವಾಬ್ದಾರಿಗಳನ್ನು ಒಳಗೊಂಡಿವೆ. ಆದ್ದರಿಂದ ಭಾರತೀಯ ಕೃಷಿ ಸಂಶೋಧನಾ ಮಂಡಳಿ ( ಐಸಿಎಆರ್) ಮಾನ್ಯತೆ ಪಡೆದ ಕೃಷಿ ಮತ್ತು ಕೃಷಿ ಸಂಬಂಧಿತ ಪದವೀಧರರಿಗೆ ಮಾತ್ರ ಈ ಹುದ್ದೆಗಳಲ್ಲಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.ಈ ಕುರಿತು ಹಲವು ಬಾರಿ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟ ಹೋರಾಟ ಆರಂಭಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಇದನ್ನೂ ಓದಿ > > ಶಿವಮೊಗ್ಗ: ಗುಡ್ಡೇಕಲ್ ನಲ್ಲಿ ಸಂಭ್ರಮದ ಹರೋಹರ ಜಾತ್ರೆ
.ರಾಜ್ಯ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣ ಮಧ್ಯಪ್ರವೇಶಿಸಿ, ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕೃಷಿ ವಿದ್ಯಾರ್ಥಿಗಳು ಮತ್ತು ರೈತ ಸಮುದಾಯದಲ್ಲಿರುವ ಆತಂಕವನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ವಿದ್ಯಾರ್ಥಿಗಳಾದ ಗುರುರಾಜ್, ಮಲ್ಲೇಶ್ ನಾಯ್ಕ್, ಪವನ್ ಸೇರಿದಂತೆವಹಿಸಿದ್ದರು.














